
ಬೇಸಿಗೆ ಸಮಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ತಾಪಮಾನವು ಅತಿಯಾಗಿ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ಹೆಲ್ಮೆಟ್ ಧರಿಸಿ ಸಂಚರಿಸುವುದು ಆರೋಗ್ಯದ ದೃಷ್ಟಿಯಿಂದ ಕಷ್ಟಕರವಾಗುತ್ತಿದೆ. ಆದ್ದರಿಂದ ಜನರ ಹಿತದೃಷ್ಟಿಯಿಂದ ಬೇಸಿಗೆ ಕಾಲ ಮುಗಿಯುವವರೆಗೆ ಹೆಲ್ಮೆಟ್ ಕಡ್ಡಾಯ ನಿಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು -ಸೈಬಣ್ಣಾ ಜಮಾದಾರ, ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು.
ಕಲಬುರಗಿ:ಜಿಲ್ಲೆಯಲ್ಲಿ ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಹೆಲ್ಮೆಟ್ ಕಡ್ಡಾಯ ನಿಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಸೈಬಣ್ಣಾ ಜಮಾದಾರ ಅವರ ನೇತೃತ್ವದಲ್ಲಿ ಕಲಬುರಗಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ತಾಪಮಾನವು 48 ರಿಂದ 52 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಪ್ರತಿವರ್ಷವೂ ಬೇಸಿಗೆ ವೇಳೆಯಲ್ಲಿ ತೀವ್ರ ಬಿಸಿಲು ಕಂಡುಬರುತ್ತಿದ್ದು, ಇದರಿಂದ ಮಕ್ಕಳಿಗೆ ಹಾಗೂ ವಯೋವೃದ್ಧರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಇಂತಹ ಸಂದರ್ಭದಲ್ಲಿ ಹೊರಗೆ ಸಂಚರಿಸುವ ಸಾರ್ವಜನಿಕರಿಗೆ ಹೆಲ್ಮೆಟ್ ಧರಿಸುವುದು ಇನ್ನಷ್ಟು ಅಸೌಕರ್ಯ ಉಂಟುಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಪ್ರದೇಶವು ಒಣಹವಾಮಾನ ಹೊಂದಿರುವುದರಿಂದ ಉಷ್ಣತೆಯ ಪರಿಣಾಮವಾಗಿ ತಲೆಸುತ್ತು, ದೇಹದ ಅಸ್ವಸ್ಥತೆ, ಮೆದುಳು ಸ್ಟ್ರೋಕ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿಗೆ ತಂದು ದಂಡ ವಸೂಲಿ ಮಾಡುತ್ತಿರುವುದು ಸಾರ್ವಜನಿಕರಿಗೆ ಮತ್ತಷ್ಟು ತೊಂದರೆ ಉಂಟುಮಾಡುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಬೇಸಿಗೆ ಕಾಲ ಮುಗಿಯುವವರೆಗೆ ಹೆಲ್ಮೆಟ್ ಕಡ್ಡಾಯ ನಿಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಇದಲ್ಲದೆ, ಕೆಲ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಗೌರವದಿಂದ ಮಾತನಾಡದೆ ಏಕವಚನದಲ್ಲಿ ಮಾತನಾಡುತ್ತಿರುವ ಬಗ್ಗೆ ಕೂಡ ಗಮನಹರಿಸಿ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಯಶ್ವಂತರಾವ ಸೂರ್ಯವಂಶಿ, ತಿಪ್ಪಣ್ಣಾ ಪವಾರ, ವಿಜಯ್ ಜಾಧವ್, ವಿಜಯಕುಮಾರ ಮಠಪತಿ, ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



