ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲಿ! | ಅಜಯ್ ಸಿಂಗ್‌ಗೆ ಸಚಿವ ಸ್ಥಾನಕ್ಕೆ ಸುನೀಲ ಮಾನಪಡೆ ಆಗ್ರಹ

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಸುನೀಲ ಮಾರುತಿ ಮಾನಪಡೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಹಲವು ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅನುಭವ ಅವರಿಗಿದ್ದು, ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡುವ ಸಾಮರ್ಥ್ಯ ಹೊಂದಿರುವ ಪ್ರಭಾವಿ ನಾಯಕರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮುಖ್ಯಮಂತ್ರಿಯಾಗುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.
ಇದೇ ವೇಳೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುತ್ರರಾಗಿರುವ ಅಜಯ್ ಸಿಂಗ್ ಅವರು ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದು, ಪಕ್ಷ ಸಂಘಟನೆಯಲ್ಲಿ ಸದಾ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂ ಸಿಂಗ್ ಅವರು ಹಿಂದೆ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಬಲಪಡಿಸಲು ಶ್ರಮಿಸಿದಂತೆ, ಇಂದು ಪ್ರಿಯಾಂಕ್ ಖರ್ಗೆ ಮತ್ತು ಅಜಯ್ ಸಿಂಗ್ ಯುವಜನರ ಧ್ವನಿಯಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು. ಅದು ಸಾಧ್ಯವಾಗದಿದ್ದರೆ ಕನಿಷ್ಠ ಉಪಮುಖ್ಯಮಂತ್ರಿ ಸ್ಥಾನ ನೀಡಿ ಭಾಗದ ಜನತೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಂತಪ್ಪ ಪಾಟೀಲ, ಸೋಮಶೇಖರ್ ಸಿಂಗೆ, ಮೈಲಾರಿ ದೊಡ್ಡಮನಿ, ಸಂಗಮೇಶ್ ಕಲಬುರಗಿ, ಮಲ್ಲಪ್ಪ ಪೂಜಾರಿ, ವೆಂಕಟೇಶ್ ಚವ್ಹಾಣ, ಅನಿಲ್ ಪೂಜಾರಿ, ಸುರೇಶ್ ಹೊಡಲ, ಜಲೀಲ್ ಸಾಬ್ ಮಡಕಿ, ಜಗನ್ನಾಥ ಪಾಟೀಲ, ಮಲ್ಲಿಕಾರ್ಜುನ ಸರಡಗಿ, ಜೈಭೀಮ್ ದೊಡ್ಡಮನಿ ಹಾಗೂ ಅನಿಲ್ ಮಂಗಾ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.




