“ತಿಪ್ಪಣ್ಣಪ್ಪ ಕಮಕನೂರ ಅವರಿಗೆ MLC ಸ್ಥಾನ ಮುಂದುವರಿಸಿ ಸಚಿವರನ್ನಾಗಿ ನೇಮಿಸಬೇಕು: ಮಲ್ಲಿಕಾರ್ಜುನ ಮೆಕಾನಿಕ್ ಆಗ್ರಹ”

ಸೇಡಂ : ಕೋಲಿ-ಕಬ್ಬಲಿಗ ಸಮಾಜದ ಪ್ರಭಾವಿ ನಾಯಕ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿರುವ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ವಿಧಾನ ಪರಿಷತ್ (MLC) ಸದಸ್ಯತ್ವವನ್ನು ಮುಂದುವರಿಸುವುದರ ಜೊತೆಗೆ ಸಚಿವ ಸ್ಥಾನ ನೀಡಬೇಕು ಎಂದು ಕೋಲಿ-ಕಬ್ಬಲಿಗ ಸಮಾಜದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮೆಕಾನಿಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕೋಲಿ-ಕಬ್ಬಲಿಗ ಸಮಾಜದ ಮತಗಳನ್ನು ಒಗ್ಗೂಡಿಸುವಲ್ಲಿ ತಿಪ್ಪಣ್ಣಪ್ಪ ಕಮಕನೂರ ಅವರು ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.ಕಾಮನಬಿಲ್ಲಿನಂತೆ ವಿವಿಧ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಪಕ್ಷದ ಸಂಘಟನೆ ಬಲಪಡಿಸಲು ಶ್ರಮಿಸಿರುವ ಕಮಕನೂರ ಅವರು ಪಕ್ಷದ ಅನುಭವಿ ಹಾಗೂ ನಿಷ್ಠಾವಂತ ನಾಯಕರಾಗಿದ್ದು, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭಿಮಾನಿಯಾಗಿ ಪಕ್ಷದ ಬೆಳವಣಿಗೆಗೆ ನಿರಂತರವಾಗಿ ದುಡಿಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಕೋಲಿ-ಕಬ್ಬಲಿಗ ಸಮಾಜದ ಜನರ ಆಶೋತ್ತರಗಳಿಗೆ ನ್ಯಾಯ ಒದಗಿಸಲು ಹಾಗೂ ಸಮಾಜಕ್ಕೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ತಿಪ್ಪಣ್ಣಪ್ಪ ಕಮಕನೂರ ಅವರ MLC ಸ್ಥಾನವನ್ನು ಮುಂದುವರಿಸಿ, ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವ ಮೂಲಕ ಸಮಾಜದ ಆಶಯಗಳನ್ನು ಈಡೇರಿಸಬೇಕು ಎಂದು ಮಲ್ಲಿಕಾರ್ಜುನ ಮೆಕಾನಿಕ್ ಆಗ್ರಹಿಸಿದ್ದಾರೆ.




