12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಯೋಗದ ಮೌಲ್ಯ ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಕಲಬುರಗಿ: ಯೋಗವನ್ನು ಕೇವಲ ಯೋಗ ದಿನಾಚರಣೆಗೆ ಸೀಮಿತಗೊಳಿಸದೆ, ಅದರ ಮೌಲ್ಯಗಳನ್ನು ಅರಿತು ಪ್ರತಿದಿನದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸಾರ್ವಜನಿಕರಿಗೆ ಕರೆ ನೀಡಿದರು.
ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
“ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕಳೆದ ಏಳು ವರ್ಷಗಳಿಂದ ತಾವು ಪ್ರತಿದಿನ ಸೂರ್ಯ ನಮಸ್ಕಾರದೊಂದಿಗೆ ದಿನವನ್ನು ಆರಂಭಿಸುತ್ತಿರುವುದಾಗಿ ತಿಳಿಸಿದರು. ಯೋಗವು ಕೇವಲ ದೈಹಿಕ ಆರೋಗ್ಯವನ್ನಷ್ಟೇ ಅಲ್ಲದೆ, ಮಾನಸಿಕ ಸದೃಢತೆ, ಆತ್ಮಸ್ಥೈರ್ಯ, ತಾಳ್ಮೆ ಮತ್ತು ಸಕಾರಾತ್ಮಕ ಚಿಂತನೆ ಬೆಳೆಸಲು ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಯೋಗದ ಮಹತ್ವವು ಸ್ಥಳೀಯ ಮಟ್ಟದಿಂದ ಅಂತರರಾಷ್ಟ್ರೀಯ ಮಟ್ಟದವರೆಗೆ ವ್ಯಾಪಿಸಿದ್ದು, ಪ್ರತಿದಿನ 30 ರಿಂದ 45 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ (ಪ್ರಭಾರ) ಡಾ. ಕೆ.ಬಿ. ಬಬಲಾದಿ ಸ್ವಾಗತಿಸಿ, ಯೋಗ ಶಿಷ್ಟಾಚಾರದ ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಖರ್ ಮೊಘ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಯೋಗ ತಜ್ಞರಾದ ನಾಗರಾಜ ಹಾಗೂ ಶಶಿಕಲಾ ಯೋಗ ಪ್ರದರ್ಶನ ನಡೆಸಿಕೊಟ್ಟರು. ಆರ್.ಜೆ. ವಾಣಿ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲೆಯ ವಿವಿಧ ಯೋಗ ಸಂಘ-ಸಂಸ್ಥೆಗಳ ಸದಸ್ಯರು, ಯೋಗ ಶಿಬಿರಾರ್ಥಿಗಳು, ಶಾಲಾ ಹಾಗೂ ಆಯುಷ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 1,050 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.




