ಉತ್ತರ ಕ್ಷೇತ್ರದ ಮೂಲಸೌಕರ್ಯ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ

ಕಲಬುರಗಿ: ನಗರದ ಉತ್ತರ ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಹೆಚ್ಚಿನ ಆದ್ಯತೆ ನೀಡುವ ಮೂಲಕ ಕ್ಷೇತ್ರದ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಶಿವಾನಂದ ಪಿಸ್ತಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಉತ್ತರ ಮತಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಪರಿಹಾರ ದೊರೆತಿಲ್ಲ. ಇದರಿಂದ ಕ್ಷೇತ್ರದ ಜನರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರದ ವಿವಿಧ ಬಡಾವಣೆಗಳಲ್ಲಿನ ಹದಗೆಟ್ಟ ರಸ್ತೆಗಳು ಹಾಗೂ ಗುಂಡಿಗಳನ್ನು ಕೂಡಲೇ ದುರಸ್ತಿ ಮಾಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಶಾಸಕರು ಕ್ಷೇತ್ರದ ಎಲ್ಲ ವಾರ್ಡ್‌ಗಳಿಗೆ ಖುದ್ದಾಗಿ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವುದು ಶಾಸಕರ ಜವಾಬ್ದಾರಿಯಾಗಿದೆ. ಆದ್ದರಿಂದ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ, ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಶಿವಾನಂದ ಪಿಸ್ತಿ ಹೇಳಿದ್ದಾರೆ.
ಅಭಿವೃದ್ಧಿ ಕಾರ್ಯಗಳಿಗೆ ಶೀಘ್ರ ಚಾಲನೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.



