ಕಲಬುರಗಿಜಿಲ್ಲೆ ಸುದ್ದಿ

ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ: ಡಾ. ಚಂದ್ರಕಾಂತ ಶಿರೋಳೆ

ಮೂರು ವರ್ಷ ಕಳೆದರೂ ಸರ್ಕಾರದ ಭರವಸೆ ಈಡೇರಿಲ್ಲ

ಕಲಬುರಗಿ: ಉನ್ನತ ಶಿಕ್ಷಣ ಇಲಾಖೆಯಲ್ಲಿನ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಸಾಕಷ್ಟು ಸಂಖ್ಯೆಯಲ್ಲಿ ಖಾಲಿ ಇರುವ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಕಾಯಂಗೊಳಿಸುವ ಮೂಲಕ ಭವಿಷ್ಯಕ್ಕೆ ಭದ್ರತೆ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಚಂದ್ರಕಾಂತ ಶಿರೋಳೆ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರು ಸೇವಾ ಭದ್ರತೆಯ ನಿರೀಕ್ಷೆಯಲ್ಲಿದ್ದಾರೆ. ಆದರೆ, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅನೇಕ ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇದರಿಂದ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ಪ್ರಸ್ತುತ ಸ್ಥಿತಿ ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರ ಸೇವೆಯನ್ನು ಕಾಯಂಗೊಳಿಸುವ ಅಗತ್ಯವಿದೆ. ಅರ್ಹತೆ ಹಾಗೂ ಸೇವಾನುಭವ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ದೀರ್ಘಾವಧಿಯ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿ ಈವರೆಗೆ ವಿವಿಧ ಪಕ್ಷಗಳ ಸರ್ಕಾರಗಳು ಆಡಳಿತ ನಡೆಸಿವೆ. ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಈ ಭರವಸೆ ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಸರ್ಕಾರ ‘ಶೈಕ್ಷಣಿಕ ಸಂಯೋಜಕರು’ ಎಂಬ ಹೊಸ ಜವಾಬ್ದಾರಿಯನ್ನು ಸೃಷ್ಟಿಸಿರುವುದು ಸ್ವಾಗತಾರ್ಹ ಕ್ರಮ. ಆದರೆ, ಶೈಕ್ಷಣಿಕ ಸಂಯೋಜಕರ ಕೆಲಸದ ಸ್ವರೂಪ ಹಾಗೂ ಕರ್ತವ್ಯಗಳ ಕುರಿತು ಸ್ಪಷ್ಟತೆ ಇಲ್ಲದಿರುವುದು ಮತ್ತು ಈ ವ್ಯವಸ್ಥೆಯನ್ನು ಕೇವಲ ಮೂರು ವರ್ಷಗಳಿಗೆ ಸೀಮಿತಗೊಳಿಸಿರುವುದು ಸೂಕ್ತವಲ್ಲ. ಈ ಕುರಿತು ಮರುಪರಿಶೀಲನೆ ನಡೆಸಿ, ಅರ್ಹತೆ ಮತ್ತು ಸೇವಾನುಭವ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ದೀರ್ಘಾವಧಿಯ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯದಲ್ಲಿ 12 ಸಾವಿರಕ್ಕೂ ಹೆಚ್ಚು ಹಾಗೂ ಕಲ್ಯಾಣ ಕರ್ನಾಟಕದಲ್ಲಿ 2,800ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ರವಿ ಬೆಳವಾರ, ಡಾ. ಮಾರುತಿ ಮನಪಳ್ಳಿ, ಡಾ. ಬಾಬು ಪೂಜಾರಿ, ಡಾ. ನಾಗನಗೌಡ ಪಾಟೀಲ, ಡಾ. ಬಾಬುರಾವ್ ಸಾಗರ, ಡಾ. ಶರಣು ಮೈಸಲಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button