ಕಲಬುರಗಿಜಿಲ್ಲೆ ಸುದ್ದಿ

ಮ್ಯುಟೇಷನ್‌ಗೆ ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ

ಕಲಬುರಗಿ: ಜಮೀನಿನ ಮ್ಯುಟೇಷನ್ ಮಾಡಿಕೊಡಲು ₹18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲಿ ₹12 ಸಾವಿರವನ್ನು ಫೋನ್‌ಪೇ ಮೂಲಕ ಸ್ವೀಕರಿಸಿದ ಆರೋಪದ ಮೇರೆಗೆ ಜೇವರ್ಗಿ ತಾಲ್ಲೂಕಿನ ಬಿರಾಳ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೈಬೂಬ್ ಪಟೇಲ್ ಅವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಮಲ್ಲಾ (ಬಿ) ಗ್ರಾಮದ ಸರ್ಕಾರಿ ಖುಲ್ಲಾ ಜಾಗದಲ್ಲಿರುವ 60×40 ಅಡಿ ನಿವೇಶನವನ್ನು ಮರೆಪ್ಪ ತಳವಾರ ಅವರ ಹೆಸರಿಗೆ ಮ್ಯುಟೇಷನ್ ಮಾಡಿಕೊಡಲು ಪಿಡಿಒ ಮೈಬೂಬ್ ಪಟೇಲ್ ಅವರು ದೂರುದಾರ ಶಿವರೆಡ್ಡಿ ಅವರ ಬಳಿ ₹18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಬೇಡಿಕೆಯಂತೆ ₹12 ಸಾವಿರ ಲಂಚದ ಹಣವನ್ನು ಫೋನ್‌ಪೇ ಮೂಲಕ ಪಿಡಿಒ ಸ್ವೀಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಡಿಒ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button