ಪೌರಕಾರ್ಮಿಕರ ನೇರ ನೇಮಕಾತಿಗೆ ಮನವಿ: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಭರವಸೆ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಪೌರ ಕಾರ್ಮಿಕರು, ವಾಹನ ಚಾಲಕರು, ಲೋಡರ್ಸ್ ಕ್ಲೀನರ್ಗಳ ಒಕ್ಕೂಟ (ರಿ) ವತಿಯಿಂದ ಇತ್ತೀಚೆಗೆ ಬೆಂಗಳೂರಿಗೆ ನಿಯೋಗ ತೆರಳಿ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಸುರೇಶ ಬೈರತಿ ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಳೆದ ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಇದುವರೆಗೂ ನೇರ ನೇಮಕಾತಿ ಹಾಗೂ ನೇರ ಪಾವತಿ ಅಡಿಯಲ್ಲಿ ಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ರಾಜ್ಯದ ಇತರ ಜಿಲ್ಲೆಗಳಲ್ಲಿ 2017-18ನೇ ಸಾಲಿನಲ್ಲೇ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದ್ದರೂ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ ಅಡಿಯಲ್ಲಿ 445 ಹಾಗೂ ನೇರ ನೇಮಕಾತಿ ಅಡಿಯಲ್ಲಿ ಒಟ್ಟು 889 ಖಾಲಿ ಹುದ್ದೆಗಳು ಇದ್ದರೂ ಇವುಗಳನ್ನು ಭರ್ತಿ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ನಿಯೋಗವು ದೂರಿತು.
ಇದರಿಂದ ಪೌರಕಾರ್ಮಿಕರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಅವರ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ಹಿತಾಸಕ್ತಿಗೂ ಧಕ್ಕೆ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಯಿತು. ಈ ಹಿನ್ನಲೆಯಲ್ಲಿ ಕೂಡಲೇ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ನೇರ ನೇಮಕಾತಿ ಹಾಗೂ ನೇರ ಪಾವತಿ ಅಡಿಯಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಲಾಯಿತು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಸುರೇಶ ಬೈರತಿ ಅವರು, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಶೀಘ್ರದಲ್ಲೇ ನೇಮಕಾತಿ ಆದೇಶ ಪತ್ರ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ನಿಯೋಗದಲ್ಲಿ ಪೌರಕಾರ್ಮಿಕರು, ಲೋಡರ್ಗಳು, ಪ್ಲೇನರ್ಗಳು, ವಾಹನ ಚಾಲಕರು ಸೇರಿದಂತೆ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಎಂ. ಮುಡ್ಡಿ, ಮುಖಂಡರಾದ ಶಶೀಧರ ಅಮಟೆ, ರಾಜು ಕಟ್ಟಿಮನಿ, ಶಿವಕುಮಾರ ಹಾಗೂ ಇನ್ನಿತರರು ಭಾಗವಹಿಸಿದ್ದರು.



