ಜ.26 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯಾಭಿಷೇಕದ 18ನೇ ವಾರ್ಷಿಕೋತ್ಸವ ಆಚರಣೆ

ಕಲಬುರಗಿ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪುಣ್ಯತಿಥಿ ಹಾಗೂ ಅವರ ರಾಜ್ಯಾಭಿಷೇಕದ 18ನೇ ವಾರ್ಷಿಕೋತ್ಸವದ ಅಂಗವಾಗಿ ಜನವರಿ 26ರಂದು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಭವ್ಯ ಹಾಗೂ ಐತಿಹಾಸಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಸಮಾಜ ಪಕ್ಷದ ಕರ್ನಾಟಕ ಘಟಕ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾರಂಭವು ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಸ್ಮಾರಕದಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಗೆ ಆರಂಭವಾಗಲಿದೆ. ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವರಾದ ಮಹದೇವ್ ಜಿ. ಜಾನ್ಕರ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಾರ್ಗದರ್ಶನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಸಿದ್ದಪ್ಪ ಅಕ್ಕಿ ಸಾಗರ್ ಅವರು ವಹಿಸಲಿದ್ದಾರೆ.
ಈ ಐತಿಹಾಸಿಕ ಸಮಾರಂಭದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಆಂಧ್ರ ಪ್ರದೇಶ, ಮಧ್ಯ ಪ್ರದೇಶ, ಪಂಜಾಬ್, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಿಂದ ಪಕ್ಷದ ಪ್ರಮುಖ ನಾಯಕರು, ಪದಾಧಿಕಾರಿಗಳು, ಸಮಾಜಮುಖಿ ಚಿಂತಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಬ್ರಿಟಿಷರ ವಿರುದ್ಧ ಅಪ್ರತಿಮ ಧೈರ್ಯದಿಂದ ಹೋರಾಡಿ ಸ್ವರಾಜ್ಯದ ಕನಸನ್ನು ಕಂಡ ಸಂಗೊಳ್ಳಿ ರಾಯಣ್ಣರ ತ್ಯಾಗ, ಬಲಿದಾನ ಮತ್ತು ಸ್ವಾಭಿಮಾನಿ ಹೋರಾಟವನ್ನು ಸ್ಮರಿಸುವುದು ಹಾಗೂ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವುದೇ ಈ ರಾಜ್ಯಾಭಿಷೇಕದ ಪ್ರಮುಖ ಉದ್ದೇಶವಾಗಿದೆ ಎಂದು ಶಿವಲಿಂಗಪ್ಪ ಕಿನ್ನೂರ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಚರಿಸಲಾಗುತ್ತಿದ್ದು, ಇದು ಸ್ವಾಭಿಮಾನ ಮತ್ತು ದೇಶಭಕ್ತಿಯ ಪ್ರತೀಕವಾಗಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಐತಿಹಾಸಿಕ ಹಾಗೂ ಸ್ಮರಣೀಯ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಅಭಿಮಾನಿಗಳು ಮತ್ತು ಸ್ವಾಭಿಮಾನಿ ಚಿಂತನೆಯುಳ್ಳ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಲಿಂಗಪ್ಪ ಕಿನ್ನೂರ ಅವರು ಮನವಿ ಮಾಡಿದ್ದಾರೆ.



